ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಹಿರಿಯ ಕವಿಗಳ ಹಳೆಯ ಕವಿತೆಗಳು

ಹೊಸ ಪೀಳಿಗೆಯ ಓದುಗರಿಗಾಗಿಹಿರಿಯಕವಿಗಳಕವಿತೆಯೊಂದನ್ನು ನಿತ್ಯ ನೀಡಲಾಗುವುದು

ಅವ್ವ

ನನ್ನವ್ವ ಫಲವತ್ತಾದ ಕಪ್ಪು ನೆಲ
ಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ;
ಸುಟ್ಟಷ್ಟು ಕಸುವು, ನೊಂದಷ್ಟು ಹೂ ಹಣ್ಣು
ಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;
ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ.

ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳಬಂದಿಯ ಗೆದ್ದು,
ಹೆಂಟೆಗೊಂದು ಮೊಗೆ ನೀರು ಹಿಗ್ಗಿ;
ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು,
ಹೂವಲ್ಲಿ ಹೂವಾಗಿ ಕಾಯಲ್ಲಿ ಕಾಯಾಗಿ
ಹೆಸರು ಗದ್ದೆಯ ನೋಡಿಕೊಂಡು,
ಯೌವನವ ಕಳೆದವಳು ಚಿಂದಿಯ ಸೀರೆ ಉಟ್ಟುಕೊಂಡು.

ಸತ್ತಳು ಈಕೆ:
ಬಾಗು ಬೆನ್ನಿನ ಮುದುಕಿಗೆಷ್ಟು ಪ್ರಾಯ?
ಎಷ್ಟುಗಾದಿಯ ಚಂದ್ರ, ಒಲೆಯೆದುರು ಹೋಳಿಗೆಯ ಸಂಭ್ರಮ?
ಎಷ್ಟೋ ಸಲ ಈ ಮುದುಕಿ ಅತ್ತಳು
ಕಾಸಿಗೆ, ಕೆಟ್ಟ ಪೈರಿಗೆ, ಸತ್ತ ಕರುವಿಗೆ;
ಎಷ್ಟುಸಲ ಹುಡುಕುತ್ತ ಊರೂರು ಅಲೆದಳು
ತಪ್ಪಿಸಿಕೊಂಡ ಮುದಿಯ ಎಮ್ಮೆಗೆ?

ಸತಿ ಸಾವಿತ್ರಿ, ಜಾನಕಿ, ಉರ್ಮಿಳೆಯಲ್ಲ;
ಚರಿತ್ರೆ ಪುಸ್ತಕದ ಶಾಂತ, ಶ್ವೇತ, ಗಂಭೀರೆಯಲ್ಲ;
ಗಾಂಧೀಜಿ, ರಾಮಕೃಷ್ಣರ ಸತಿಯರಂತಲ್ಲ;
ದೇವರ ಪೂಜಿಸಲಿಲ್ಲ; ಹರಿಕತೆ ಕೇಳಲಿಲ್ಲ;
ಮುತ್ತೈದೆಯಾಗಿ ಕುಂಕುಮ ಕೂಡ ಇಡಲಿಲ್ಲ.

ಬನದ ಕರಡಿಯ ಹಾಗೆ
ಚಿಕ್ಕಮಕ್ಕಳ ಹೊತ್ತು
ಗಂಡನ್ನ ಸಾಕಿದಳು ಕಾಸು ಗಂಟಿಕ್ಕಿದಳು.
ನೊಂದ ನಾಯಿಯ ಹಾಗೆ ಬೈದು ಗೊಣಗಿ, ಗುದ್ದಾಡಿದಳು;
ಸಣ್ಣತನ, ಕೊಂಕು, ಕೆರೆದಾಟ ಕೋತಿಯ ಹಾಗೆ:
ಎಲ್ಲಕ್ಕೆ ಮನೆತನದ ಉದ್ಧಾರ ಸೂತ್ರ.
ಈಕೆ ಉರಿದೆದ್ದಾಳು
ಮಗ ಕೆಟ್ಟರೆ. ಗಂಡ ಬೇರೆ ಕಡೆ ಹೋದಾಗ ಮಾತ್ರ.

ಬನದ ಕರಡಿಗೆ ನಿಮ್ಮ ಭಗವದ್ಗೀತೆ ಬೇಡ;
ನನ್ನವ್ವ ಬದುಕಿದ್ದು
ಕಾಳುಕಡ್ಡಿಗೆ, ದುಡಿತಕ್ಕೆ, ಮಕ್ಕಳಿಗೆ;
ಮೇಲೊಂದು ಸೂರು, ಅನ್ನ, ರೊಟ್ಟಿ, ಹಚಡಕ್ಕೆ;
ಸರೀಕರ ಎದುರು ತಲೆಯೆತ್ತಿ ನಡೆಯಲಿಕ್ಕೆ,

ಇವಳಿಗೆ ಮೆಚ್ಚುಗೆ, ಕೃತಜ್ಞತೆಯ ಕಣ್ಣೀರು;
ಹೆತ್ತದ್ದಕ್ಕೆ, ಸಾಕಿದ್ದಕ್ಕೆ; ಮಣ್ಣಲ್ಲಿ ಬದುಕಿ,
ಮನೆಯಿಂದ ಹೊಲಕ್ಕೆ ಹೋದಂತೆ
ತಣ್ಣಗೆ ಮಾತಾಡುತ್ತಲೇ ಹೊರಟುಹೋದದ್ದಕ್ಕೆ

*********************************

ಪಿ.ಲಂಕೇಶ್

About The Author

6 thoughts on “ಕವಿತೆ”

  1. ನನ್ನವ್ವ ಫಲವತ್ತಾದ ಕಪ್ಪು ನೆಲವೆನ್ನುವದೇ ಅದ್ಭುತ ಮಾತು

  2. Smitha Amrithraj.

    ಮತ್ತೆ ಮತ್ತೆ ಓದಬೇಕೆನ್ನಿಸುವ ಕವಿತೆ ಧನ್ಯವಾದಗಳು ಸಂಗಾತಿ.

  3. Nagaraj Harapanahalli

    ನನ್ನ ಪ್ರೀತಿಯ ಲಂಕೇಶರ ಅವ್ವ…ನನ್ನ ಅವ್ವ ಕೂಡ…ಈ ಕವಿತೆ ಓದಿದಾಗಲೆಲ್ಲಾ ನನಗೆ ನೆನಪಾಗುವುದು ಅವ್ವ ಮತ್ತು ಅಬ್ಬಲಿಗೆ ಕವನ ಸಂಕಲನ…
    ಲಂಕೇಶ ಮೇಷ್ಟ್ರು ಜಾಣ ಜಾಣೆಯರ ಕಣ್ಣು ತೆರೆಸಿದ ಕವಿ,ಲೇಖಕ, ಪತ್ರಕರ್ತ.. ಅವರ ನೆನಪಿಸಿಕೊಳ್ಳುವುದೇ ರೋಮಾಂಚನ.

  4. Nagaraj Harapanahalli

    ಲಂಕೇಶರ ಅವ್ವ ಸಂಗಾತಿಯ ಹೃದಯ. ಥ್ಯಾಂಕ್ಸ ಟು ಮಧುಸೂದನ್ ಸರ್..ಸಂಗಾತಿ ಬಳಗಕ್ಕೆ ಸಹ …

  5. ಅವ್ವನನ್ನು ಕುರಿತು ಎಷ್ಟೋ ಕವಿತೆ ಗಳು ಬಂದಿದ್ದರೂ ಲಂಕೇಶರ ಅವ್ವನನ್ನು ಮೀರಿಸುವ ಕವಿತೆಗಳು ಬಂದಿಲ್ಲ ಅಷ್ಟೊಂದು ನೈಜತೆ ಆ ಕವಿತೆಯದು

Leave a Reply

You cannot copy content of this page

Scroll to Top