ಅಂಕಣ ಬರಹ

ಮೂರು ಗಳಿಗೆಯ ಬಾಳಿನಲ್ಲಿ…

water droplets on glass surface

          ಯಾರಿಗೆ ಯಾರುಂಟು ಎರವಿನ ಸಂಸಾರ ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೆ..

       ಶುದ್ಧ ವೈರಾಗ್ಯ ಮೂಡಿಸುವ ಈ ದಾಸರ ಪದವನ್ನು  ಬಹುಶಃ ಹಳೆಯ ತಲೆಮಾರಿನವರು ಅದೆಷ್ಟು ಸಲ ಗುಣುಗುಣಿಸಿರಬಹದೋ ಏನೋ..

       ನಿಜವೆ ?  ಈ ಪ್ರಪಂಚದಲ್ಲಿ ಯಾರಿಗೂ ಇಲ್ಲವೆ? ಲೌಕಿಕ ವ್ಯಾಪಾರಿಗಳಾದ ನಾವುಗಳು ಕಟ್ಟಿಕೊಂಡ ಸಂಸಾರ , ಕೈಕೊಂಡ ವೃತ್ತಿ , ಗೆಳೆಯರು ,ಬಂಧುಗಳು ಇವರೆಲ್ಲ ಏನೂ ಅಲ್ಲವೆ? ನೀರಿನೊಳಗಿದ್ದರೂ ನೀರನ್ನು ಸೋಕಿಸಿಕೊಳ್ಳದ ಕಮಲಪತ್ರದಂತಹ ಬದುಕು ಸಾಮಾನ್ಯರಿಗೆ ಸಾಧ್ಯವಾಗುತ್ತದಾ? ಈ ಮಾತುಗಳು ,ದಾಸವಾಣಿ ಇವೆಲ್ಲ ಇಂದಿನ ತಂತ್ರಜ್ಞಾನದ ಯುಗದ ಜನತೆಗೆ ಬೇಕೆ?

            ನಾವು ಬದುಕುವುದು ಕೇವಲ ನಮಗಾಗಿ ಎಂದರೆ  ತಮ್ಮ ಮಕ್ಕಳಿಗಾಗಿ ..ಮುಂದಿನ ಮೂರು ತಲೆಮಾರುಗಳಿಗಾಗಿ ಆಸ್ತಿ ಸಂಪಾದಿಸುವ ಜನರೆಲ್ಲ ಕೇವಲ ತಮಗಾಗಿಯೇ ಬದುಕಿದ್ದಾರೆಯೆ? ನಾನು ಹೋದರೂ ನನ್ನ ಮಕ್ಕಳು ಸುಖದಿಂದ ಇರಲಿ ಎನ್ನುವ ನಿಜ ಕಾಳಜಿ, ಅಥವಾ ನನ್ನ ಮುಂದಿನ ಹತ್ತು ತಲೆಮಾರಿನವರಿಗೆ ಕಷ್ಟ ಬರಬಾರದು ಎಂಬ ದುರಾಸೆ ಮಿಶ್ರಿತ ಕಾಳಜಿಯಿರುವುದರಿಂದಲೇ ಅಲ್ಲವೆ ಬ್ಯಾಂಕ್ ಡಿಪಾಸಿಟ್ , ಒಡವೆ, ಮನೆ , ಫ್ಲಾಟ್, ಜಮೀನು ಎಂದೆಲ್ಲ ಗಳಿಸುತ್ತಿರುವುದು.

         ಇರುವುದೊಂದೇ ಬದುಕು , ಈ ಬದುಕು ನನ್ನದು ಮಾತ್ರಾ  ಇತರರ ಬಗ್ಗೆ ನಾನು ಯೋಚಿಸುವುದಿಲ್ಲ ಎನ್ನುವುದು , ನನ್ನ ಕುಟುಂಬಕ್ಕಾಗಿ ನಾನು ನನ್ನ ಆಸೆಗಳನ್ನು ತ್ಯಾಗ ಮಾಡುವುದಿಲ್ಲ ಎನ್ನುವುದು ಒಂದು ರೀತಿಯಲ್ಲಿ ಸ್ವಾರ್ಥಪರತೆಯಾಗುತ್ತದೆ. ಒಂದು ಕುಟುಂಬ ವ್ಯವಸ್ಥೆಯಲ್ಲಿರುವ ಗಂಡು ಹೆಣ್ಣು ಇಬ್ಬರಿಗೂ ಸಮಾನ ಜವಾಬ್ದಾರಿಗಳಿರುತ್ತವೆ. ಒಂದು ವೇಳೆ ಗಂಡು ತನ್ನ ಜವಾಬ್ದಾರಿ ಮರೆತರೂ ಹೆಣ್ಣು ಆ ಕುಟುಂಬಕ್ಕಾಗಿ ತನ್ನೆಲ್ಲ ಶಕ್ತಿ ಧಾರೆಯೆರೆಯುತ್ತಾಳೆ. ನಾನಿಲ್ಲದಿದ್ದರೂ ಜಗತ್ತು  ಹಾಗೇ ನಡೆಯುತ್ತದೆ.ನಾನಿಲ್ಲವಾದರೂ ನನ್ನ ಪ್ರೀತಿ ಪಾತ್ರರು ಹಾಗೇ ಬದುಕುತ್ತಾರೆ ..ಹಾಗಿದ್ದಾಗ ನಾನೇಕೆ ನನ್ನ ಆಸೆ , ಗುರಿ ಏನೆಲ್ಲ ತ್ಯಾಗ ಮಾಡಬೇಕು ಎಂಬ ಯೋಚನೆಗಳಿರುವವರೂ ನಮ್ಮ ಮಧ್ಯೆ ಇಲ್ಲದಿಲ್ಲ.

          ಈ ಭೂಮಿ ನಮಗಾಗಿ ಅದೆಷ್ಟಲ್ಲಾ ಹೂ ,ಹಣ್ಣು ಹಸಿರು ಕೊಟ್ಟು ಆಧಾರವಾಗಿದೆಯಲ್ಲ.ಅದೂ ನನಗೇಕೆ ಬೇಕು ಇವೆಲ್ಲ ..ನನಗಿಷ್ಟ ಬಂದಂತೆ ನಾನಿರುವೆ ಎಂದು ಸುಮ್ಮನಿದ್ದರೆ ನಮ್ಮ ಗತಿ ದೇವರೇ ಗತಿ!

       ಇಟ್ಟರೆ ಸಗಣಿಯಾದೆ

    ತಟ್ಟಿದರೆ ಉರುಳಾದೆ

    ಸುಟ್ಟರೆ ನೊಸಲಿಗೆ ವಿಭೂತಿಯಾದೆ

  ಎನ್ನುವ ಮೂಕ ಗೋವು ಸಹಾ ತನ್ನ ಹಾಲೆಲ್ಲಾ ಕೇವಲ ತನ್ನ ಕಂದನಿಗಿರಲಿ ಎಂದೂ ಆಶಿಸಿಲ್ಲ.ಅದಕ್ಕೆ ಇಷ್ಟ ಇರುತ್ತದೋ ಇಲ್ಲವೋ ಆದರೂ ಕರುವಿನ ಪಾಲುಗಿಂತ ಹೆಚ್ಚು ಹಾಲನ್ನು ನಮಗೆ ನೀಡುತ್ತಿದೆ.

               ಒಂದು ಮನೆ , ಗಂಡ – ಹೆಂಡತಿ, ಇಬ್ಬರು ಪುಟ್ಟ ಮಕ್ಕಳಿದ್ದರು. ಗಂಡ ಅಸಾಧ್ಯ ಬುದ್ಧಿವಂತ. ಆಗಾಗ  ಜಗಳವಾದಾಗಲೆಲ್ಲ ಹೆಂಡತಿಗೆ  ಹೇಳುತ್ತಿದ್ದ “. ಏನು ಮಾಡ್ಲಿ ಹೇಳು…ಒಂದು ವೇಳೆ ನಾನೇನಾದರೂ ನಿನ್ನ ಮದುವೆಯಾಗಿಲ್ಲದಿದ್ದರೆ ..ಎಲ್ಲೋ ಹೋಗಿ ಏನೋ ಮಾಡಿ…ಏನೋ ಆಗಿರುತ್ತಿದ್ದೆ…ಆದ್ರೆ .ನಿನ್ನ ಮದುವೆಯಾಗಿಬಿಟ್ನೆ??”

     ಹೆಂಡತಿಯೂ ಸೋಲುತ್ತಿರಲಿಲ್ಲ..” ನೀನು ಬರೀ ನಿನ್ನ ಬಗ್ಗೆ ಹೇಳ್ತೀಯಲ್ಲ..ನನಗೂ ಒಂದಷ್ಟು ಆಸೆಗಳಿದ್ದವು..ನಿನ್ನ ಮದುವೆಯಾಗಿ ನಾನೂ ಅವಕ್ಕೆಲ್ಲ ಎಳ್ಳು ನೀರು ಬಿಡಲಿಲ್ಲವ …” ಎಂದು ವಾದ ಮಾಡುತ್ತಿದ್ದಳು.

     ಗಂಡ – ಹೆಂಡತಿಯರ ಈ ವಾದಗಳನ್ನು ಕೇಳುತ್ತಾ ಮಕ್ಕಳು ಒಳಗೊಳಗೇ ಆತಂಕ ಪಡುತ್ತಿದ್ದವು.ಇವರಿಬ್ಬರೂ ಹೀಗೇ ಜಗಳವಾಡಿಕೊಂಡು ಮನೆ ಬಿಟ್ಟು ಹೋದರೆ ನಮ್ಮ ಗತಿಯೇನು ಎಂದು.

            ಗಂಡನಿಗೆ ಅರ್ಥವಾಗದಿದ್ದರೂ ಮಕ್ಕಳ ಈ ಆತಂಕ ಹೆಂಡತಿಗರ್ಥವಾಯಿತು. ನಮ್ಮನ್ನೇ ನಂಬಿರುವ ಈ ಮಕ್ಕಳ ಮನಸ್ಸಿಗೆ ನೋವು ಮಾಡಬಾರದೆಂದು ಗಂಡನಿಗೆ ಅರ್ಥ ಮಾಡಿಸಿದಳು.

                ಒಂದು ಸಂಸಾರ ಎಂದು ಕಟ್ಟಿಕೊಂಡ ಕ್ಷಣದಿಂದಲೇ ನಮ್ಮ ಕೆಲವೊಂದು ಆದ್ಯತೆಗಳು ನಮಗೇ ಅರಿವಿಲ್ಲದಂತೆ ಬದಲಾಗಿ ಬಿಡುತ್ತವೆ. ಬಹಳಷ್ಟು ಸಂದರ್ಭಗಳಲ್ಲಿ ನಾವುಗಳು ನಮ್ಮ ಆಸಕ್ತಿಯ ಕ್ಷೇತ್ರವನ್ನು ಮರೆತೇ ಬಿಡಬೇಕಾಗುತ್ತದೆ. ದುರದೃಷ್ಟವಶಾತ್ ಇದು ಕೇವಲ ಹೆಣ್ಣು ಮಕ್ಕಳಿಗೆ ಮಾತ್ರಾ ಅನಿವಾರ್ಯವಾಗಿಬಿಟ್ಟಿದೆ. ಗಂಡು ತನಗನಿಸಿದ್ದನ್ನ ಯಾವಾಗ ಬೇಕಾದರೂ ಸಾಧಿಸುವಷ್ಟು ಸ್ವತಂತ್ರವನ್ನು ಸ್ವಯಂ ತೆಗೆದುಕೊಂಡು ಬಿಟ್ಟಿದ್ದರೆ ಹೆಣ್ಣು ಮನೆ , ಮಕ್ಕಳು ಅವರ ಓದುಬರಹ ,ಆರೋಗ್ಯ ಮನೆಯಲ್ಲಿನ ಹಿರಿಯರ ಆರೈಕೆ ಎಂದು ನೂರಾರು ಜವಾಬ್ದಾರಿಗಳನ್ನ ತನ್ನ ಕೋಮಲಭುಜಗಳ ಮೇಲೆ ಹೊತ್ತು ಇದೇ ನನ್ನ ಬದುಕು ಎಂದುಕೊಂಡು ಹಾದಿ ಸವೆಸುತ್ತಾಳೆ.

         ಗಂಡು ಮನೆಯ ಜವಾಬ್ದಾರಿಯನ್ನ ಸಮವಾಗಿ ನಿಭಾಯಿಸಿದ್ದರೆ ಹೆಣ್ಣಿಗೆ ಅದೂ ಏನಾದರೊಂದು ಸಾಧಿಸಬೇಕೆಂಬ ಆಕಾಂಕ್ಷೆಯಿರುವ ಹೆಣ್ಣಿಗೆ ಸಂಸಾರ ಹೊರೆಯೆನಿಸುವುದಿಲ್ಲ. ಮನೆ ಹೊರಗು ಒಳಗುಗಳೆರಡನ್ನೂ ನಿಭಾಯಿಸುವ ಕುಶಲತೆ ಆಕೆಗಿದೆ.

ಆದರೆ ಯಾವುದೋ ಒಂದು ಘಳಿಗೆಯಲ್ಲಿ…ಛೇ ..ಇದೆಂತಹ ಬದುಕು ನನ್ನದು ..ನನಗಾಗಿ ನಾನು ಬದುಕದೆ ಈ ಮನೆ ,ಗಂಡ ಮಕ್ಕಳಿಗಾಗಿ ಬದುಕುತ್ತಿದ್ದೇನಲ್ಲ..ಹಾಗಾದರೆ ನನಗಾಗಿ ಬದುಕುವುದಾದರೂ ಯಾವಾಗ ಎನಿಸಿಬಿಟ್ಟರೆ ಅಲ್ಲಿಗೆ ಮುಗಿಯಿತು ಆ ಕುಟುಂಬದ ಸರ್ವನಾಶ !! ಹೆಣ್ಣಿಗೆ ಹೀಗೆಂದೂ ಅನಿಸದಂತೆ ನೋಡಿಕೊಳ್ಳುವ ಗುರುತರ ಹೊಣೆ ಗಂಡುಗಳಿಗಿದೆ.

               ಕುಟುಂಬ ಒಂದು ಮಧುರ ಬಂಧ! ಏನೂ ಸರಯಿಲ್ಲದಿದ್ದಾಗ, ತೀರಾ ಹಿಂಸೆಯಾಗುತ್ತಿದ್ದಾಗ ಪರಸ್ಪರರ ಒಪ್ಪಿಗೆ ಮೇರೆಗೆ ಬೇರಾದರೂ ಮಕ್ಕಳ ಜವಾಬ್ದಾರಿ ತಪ್ಪಿಸಿಕೊಳ್ಳುವುದು ಸಾಧ್ಯವೇ ಇಲ್ಲ.

         ನಮ್ಮ ನಮ್ಮ ತಾಯ್ತಂದೆಯರನ್ನೇ ತೆಗೆದುಕೊಳ್ಳೋಣ. ಅವರಲ್ಲಿ ಯಾರಾದರೊಬ್ಬರು ಅಥವಾ ಇಬ್ಬರೂ ನನ್ನ ದಾರಿ ನನಗೆ ನಾನಿಲ್ಲದೆಯೂ ಇವರೆಲ್ಲ ಇದ್ದೇ ಇರುತ್ತಾರೆ ..ನನ್ನ ಆಕಾಂಕ್ಷೆಯೇ ಮುಖ್ಯ ಎಂದು ಹೊರಟು ಬಿಟ್ಟಿದ್ದರೆ ನಾವುಗಳು ಈಗ ಇರುವಂತೆ ಇರಲು ಸಾಧ್ಯವಾಗುತ್ತಿತ್ತೆ? ( ವ್ಯತಿರಿಕ್ತ ಉದಾಹರಣೆಗಳಿವೆ ..ಇಲ್ಲಿ ಮಾತು ಸಾಮಾನ್ಯವಾಗಿ ಕುಟುಂಬದ ಕುರಿತು ಬಂದಿದೆ).

                  ನಿಜ , ನಾನಿಲ್ಲದೆಯೂ ಲೋಕ ಇದ್ದೇ ಇರುತ್ತದೆ..ನನ್ನವರೂ ಬದುಕಿ ಬಾಳಿಯೇ ಬಾಳುತ್ತಾರೆ. ಆದರೆ ನಾನಿಲ್ಲದಾಗ ನನ್ನವರನ್ನು ಬದುಕಲು ಸಿದ್ಧ ಮಾಡುವುದಿದೆಯಲ್ಲ..ಅದೇ ನಮ್ಮೆಲ್ಲರ ಹೊಣೆಗಾರಿಕೆ.ನಾನಿಲ್ಲದ ಮೇಲೆ ಮನೆ ಮಾಡುವುದೇಕೆ ಎಂದು ಯಾರಾದರೂ ಯೋಚಿಸಿದ್ದರೆ ಜನಸಾಲದ ಹೊರೆಯಲ್ಲಿ ನಲುಗಿ ಮನೆ ಕಟ್ಟುತ್ತಲೇ ಇರಲಿಲ್ಲ.ಒಂದು ವೇಳೆ ಸಾಲ ತೀರಿಸಿದ ಮರು ದಿನವೇ ಆತ ಸತ್ತರೂ ಅಯ್ಯೋ ನಾನು ಕಟ್ಟಿಸಿದ ಮನೆಯಲ್ಲಿ ಬಹಳ ದಿನ ಬದುಕಲಿಲ್ಲ ಎಂದು ಕೊರಗುತ್ತ ಸಾಯಲಾರ.ಬದಲಾಗಿ ನಾನು ಹೋದರೂ ನನ್ನವರಿಗೊಂದು ನೆಲೆ ಇದೆ ಎಂದು ನೆಮ್ಮದಿಯಿಂದ ಸಾಯುತ್ತಾನೆ.ಆಸ್ತ ಮಾಡದವನು ಮಕ್ಕಳನ್ನು ಚೆನ್ನಾಗಿ ಓದಿಸಿದವನು ನಾನಿಲ್ಲದೆಯೂ ನನ್ನವರು ಬದುಕಲು ಗಟ್ಡಿಗರಾಗಿದ್ದಾರೆ ಎಂದು ನಿರಾಳವಾಗಿ ಸಾಯುತ್ತಾನೆ. ಇದೆಲ್ಲ ಇಲ್ಲದವನೂ ಸಹಾ ನಾನು ಹೋದರೇನು ನನ್ನ ಹೆಂಡತಿ ಮಕ್ಕಳು ನನ್ನಂತೆಯೇ ದಿನಾ ದುಡಿದು ತಿನ್ನುತ್ತಾರೆ ಎಂಬ ಭಾವದಲ್ಲಿ ಸಾಯುತ್ತಾನೆ.

                ಇಲ್ಲಿ ನಾವು ಯಾರೂ ನಮಗಾಗಿ ಬದುಕುವುದಿಲ್ಲ..ಆದರೆ ನಾವೇ ಅಂಟಿಸಿಕೊಂಡ ಬಂಧಗಳಿಗಾಗಿ ಬದುಕುತ್ತೇವೆ.ಹಣ ,ಕೀರ್ತಿ..ಹೀಗೇ ಹತ್ತಾರು  ಕಾರಣಗಳಿಂದ ಕುಟುಂಬದ ಜವಾಬ್ದಾರಿ ತೊರೆದ ಬಹಳಷ್ಟು  ಬದುಕು ಒಂದು ಹಂತದಲ್ಲಿ ಪ್ರಸಿದ್ಧಿಗೆ ಬಂದರೂ ನಂತರ  ಮೂರಾಬಟ್ಟೆಯಾಗಿರುವ ಉದಾಹರಣೆಗಳೂ ನಮ್ಮ ಕಣ್ಣ ಮುಂದಿವೆ.

             ಗಂಡಿರಲಿ ಹೆಣ್ಣಿರಲಿ..ಕುಟುಂಬ ವ್ಯವಸ್ಥೆ ಗೆ ಒಳಪಟ್ಟ ಮೇಲೆ ಪರಸ್ಪರರ ಗೌರವಿಸುತ್ತಾ ಮನೆ ಕುಟುಂಬ ಎನ್ನುವುದು ಇಬ್ಬರ ಪಾಲಿಗೂ ಹೊರೆಯಾಗದಂತೆ ನಡೆದುಕೊಳ್ಳುವುದು ತೀರಾ ಅನಿವಾರ್ಯ. ಹೀಗೆ ರಾಜಿಯಾಗಲು ಸಾಧ್ಯವಿಲ್ಲದವರು ಸಂಸಾರ ಕಟ್ಡಿಕೊಳ್ಳುವ ಮುನ್ನ ನೂರು ಬಾರಿ ಯೋಚಿಸಬೇಕಿದೆ.ನಮ್ಮ ಬದುಕನ್ನು ನಾವು ಹಾಳುಗೆಡವಬಹುದು ಆದರೆ ನಮ್ಮನ್ನು ನಂಬಿದವರ ಬದುಕನ್ನು ಹಾಳುಗೆಡವಲು ನಮಗಾವ ಅಧಿಕಾರವೂ ಇರುವುದಿಲ್ಲ.. 

         ನಾವು ಬದುಕುವುದು ಕೇವಲ ನಮಗಾಗಿ ಅಲ್ಲ..ನಮ್ಮವರಿಗಾಗಿಯೂ ಹೌದು..ಅದಕ್ಕಾಗಿ ಒಂದಷ್ಟು ನಮ್ಮ ಆಸೆಗಳನ್ನ  ಹತ್ತಿಕ್ಕಿಕೊಳ್ಳಲೇಬೇಕಾಗುತ್ತದೆ.

   ಒಂದು ಹಕ್ಕಿಯೂ ಸಹಾ ತನ್ನ ಮರಿಗಳಿಗೆ ರೆಕ್ಜೆ ಮೂಡಿ ಅವು ಪುರ್ರನೆ ಬಾನಿನಲ್ಲಿ ಹಾರುವ ಸಾಮರ್ಥ್ಯ ಪಡೆವವರೆಗೂ ಕಾಳಜಿಯಿಂದ ಅವುಗಳನ್ನ ಪಾಲಿಸುತ್ತದೆ.

             ಹಿಂಡಿನಲ್ಲಿ ವಾಸಿಸುವ ಪ್ರಾಣಿಗಳೂ ತಮ್ಮ ಹಿಂಡಿನಲ್ಲಿ ಯಾವುದಾದರೊಂದು ಪ್ರಾಣಿಸಂಕಷ್ಟಕ್ಕೆ ಸಿಲುಕಿದಾಗ  ಜೀವದ ಹಂಗು ತೊರೆದು ಅದನ್ನು ಕಾಪಾಡಿದ ಉದಾಹರಣೆಗಳೂ ಇವೆ.

       ಹೀಗಿರುವಾಗ ನಾವು ಮನುಷ್ಯರು! ಹೇಳಿ ಕೇಳಿ ಸಮಾಜ ಜೀವಿಗಳು..ಕುಟುಂಬ ವ್ಯವಸ್ಥೆಯನ್ನ ಒಪ್ಪಿಕೊಂಡವರು ನನಗಾಗಿ ನಾನು ಬದುಕುತ್ತೇನೆಂದು ಎಲ್ಲ ತೊರೆದು ಅಷ್ಟು ಸುಲಭವಾಗಿ ನಮ್ಮಿಷ್ಟದ ಹಾದಿಯಲ್ಲಿ ಹೋಗಿಬಿಡಲಾಗುತ್ತದೆಯೆ?

        ಮಕ್ಕಳು ತಮ್ಮ ಅಪ್ಪ- ಅಮ್ಮದಿರು ಇಲ್ಲವಾದಾಗಲೂ ಅವರ ಬಗ್ಗೆ ಕೃತಜ್ಞತೆಯಿಂದ ಪ್ರೀತಿಯಿಂದ ನೆನೆವಂತೆ ನಮ್ಮ ಬಾಳಿರಬೇಕು.ಇಂದಿನ ಫಾಸ್ಟ್ ಜನರೇಷನ್ ರವರು ಇದನ್ನ ಒಪ್ಪುವರೋ ಇಲ್ಲವೊ ತಿಳಿಯದು. ಎಷ್ಟೆಲ್ಲ ಜವಾಬ್ದಾರಿಯುತವಾಗಿ ಮಕ್ಕಳನ್ನು ಬೆಳೆಸಿದರೂ  ಮುಂದೆ ಆ ಮಕ್ಕಳು  ತಮ್ಮ ತಂದೆ ತಾಯಿಯರನ್ಮು ಹೀನಾಯವಾಗಿ ಕಾಣುವ ,ಅನಾಥಾಶ್ರಮಕ್ಕೆ ತಳ್ಳುವುದೂ ನಡೆಯುತ್ತಲೇ ಇದೆ. ಹಾಗೆಂದು ಎಲ್ಲೋ ಕೆಲವರು ಹೀಗೆ ಮಾಡುತ್ತಾರೆಂದು ಎಲ್ಲಾ  ಅಪ್ಪ – ಅಮ್ಮದಿರು ತಮ್ಮ ಮಕ್ಕಳನ್ನ ಓದಿಸದೆ ಒಳ್ಳೆಯ ಸಂಸ್ಕಾರ ಕೊಡದೆ ಬೆಳೆಸಲು ಇಚ್ಛಿಸುವುದೆಲ್ಲಿಯಾದರೂ ಇದೆಯೆ?  

              ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಶುದ್ಧ ನೀರು ,ಶುದ್ಧ ಭೂಮಿಯನ್ನು ಉಳಿಸೋಣವೆಂದು ಆಶಿಸುವ ನಾವುಗಳು ಅಂತೆಯೇ ಈ ಶುದ್ಧ ಜಗತ್ತಿನಲ್ಲಿ ಎಲ್ಲಾ ರೀತಿಯಿಂದಲೂ ಬದುಕಲು ಅರ್ಹರಾದ ಪೀಳಿಗೆಯನ್ನು ಬೆಳೆಸುವುದೂ ಅಷ್ಟೇ ಮುಖ್ಯ.

        ತಾನು ಬಾಡಿ  ಮಣ್ಣ ಸೇರಿ ಹೋಗುತ್ತೇನೆಂದು ಮಲ್ಲಿಗೆ ಪರಿಮಳ ಸೂಸುವುದ ನಿಲ್ಲಿಸುವುದಿಲ್ಲ. ತಾನು  ಹೇಗಿದಗದರೂ ಆರಿ ಕತ್ತಲಾವರಿಸಿಬಿಡುತ್ತದೆಂದು ಒಂದು ಹಣತೆ ಎಣ್ಣೆ ಬತ್ತಿ ಎಲ್ಲಾ ಇದ್ದರೂ ಬೆಳಕು ಕೊಡದೆ  ಸುಮ್ಮನಿರುವುದಿಲ್ಲ.

      ಬದುಕೂ ಅಷ್ಟೇ ..ಮಲ್ಲಿಗೆಯಂತಾಗಲಿ, ಉರಿವ ಹಣತೆಯಂತಾಗಲಿ.ಇರುವಷ್ಟು ದಿನ ಸುತ್ತಮುತ್ತ ಪರಿಮಳವನ್ನೂ ,ಬೆಳಕನ್ನೂ ಚೆಲ್ಲುವಂತಾಗಲಿ.

*********

                            ದೇವಯಾನಿ

ಕಾಲೇಜು ದಿನಗಳಿಂದ ದೇವಯಾನಿ ಹೆಸರಿನಲ್ಲಿ ಕಥೆ ,ಕವನ ,  ಅನುವಾದಿತ ಕಥೆ , ಪ್ರಬಂಧ ಬರೆಯುತ್ತಿದ್ದು ತುಷಾರ, ಮಯೂರ ,ಕಸ್ತೂರಿ , ಪ್ರಜಾವಾಣಿ, ವಿಕ್ರಮ , ಉತ್ಥಾನ, ಉದಯವಾಣಿ, ತರಂಗ ,ವಿಜಯ ಕರ್ನಾಟಕ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ವೃತ್ತಿಯಿಂದ ಗಣಿತ ವಿಜ್ಞಾನ ಪ್ರೌಢಶಾಲಾ ಶಿಕ್ಷಕಿ.ಇಪ್ಪತ್ತನಾಲ್ಕು ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಪಠ್ಯಪುಸ್ತಕ ಸಮಿತಿಯ ಸದಸ್ಯರಾಗಿ ಹಲವಾರು ಸಂಪನ್ಮೂಲ ಸಾಹಿತ್ಯವನ್ನು ರಚಿಸಿದ್ದು ಹಲವಾರು ರಾಜ್ಯಮಟ್ಟದ ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಶಾಲಾ ಮಕ್ಕಳಿಗಾಗಿ ” ಧರೆಯನುಳಿಸುವ ಬನ್ನಿರಿ, ಮೂರು ವೈಜ್ಞಾನಿಕ ನಾಟಕಗಳು” , “ತುಟಿ ಬೇಲಿ ದಾಟಿದ ನಗು” ಕವನ ಸಂಕಲನ ,  “ತುಂಡು ಭೂಮಿ ತುಣುಕು ಆಕಾಶ”  ಕಥಾ ಸಂಕಲನ ಪ್ರಕಟಿಸಿದ್ದು ಅನುವಾದಿತ ಕಥಾ ಸಂಕಲನ ಅಚ್ಚಿನಲ್ಲಿರುತ್ತದೆ   

Leave a Reply

Back To Top